ಬೆಂಗಳೂರು : ನಗರದ ಅರಮನೆ ಆವರಣದಲ್ಲಿ ಆಯೋಜಿಸಲಾಗಿರುವ ‘Invest Karnataka 2025’ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಚಾಲನೆ ನೀಡಿದ್ದಾರೆ. ಮೂರು ದಿನಗಳ ಸಮಾವೇಶ ಪ್ರತಿಷ್ಠಿತ ಕಂಪನಿಗಳೊಂದಿಗೆ ಹೂಡಿಕೆ ಒಪ್ಪಂದ, ವಿಚಾರ ಸಂಕಿರಣ, ನೀತಿ ಘೋಷಣೆಗೆ ಸಾಕ್ಷಿಯಾಗಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ್, ಕೇಂದ್ರ ಆಹಾರ ಮತ್ತು ನಗರ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ‘ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಕಾರ್ಯ ಪರಿಸರ ಹೊಂದಿರುವ ಕರ್ನಾಟಕವು ಬಂಡವಾಳ ಹೂಡಿಕೆಗೆ ಹೇಳಿ ಮಾಡಿಸಿದ ರಾಜ್ಯವಾಗಿದೆ. ಭಾರತದ ಭವ್ಯ ಭವಿಷ್ಯ ಬೆಂಗಳೂರಿನ ಕೈಯಲ್ಲಿದೆ ಎಂದು ಹೇಳಿದ್ದಾರೆ.

ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ ಇಡೀ ದೇಶವೇ ಅವರ ಬೆನ್ನಿಗಿರಲಿದೆ. ಭಾರತದ ಭವಿಷ್ಯದ ಬಗ್ಗೆ ಅನುಮಾನವಿರುವವರು ಒಮ್ಮೆ ಬೆಂಗಳೂರಿಗೆ ಬಂದು ಇಲ್ಲಿನ ಐಟಿ, ಸ್ಟಾರ್ಟಪ್ ಮತ್ತು ಇನ್ನಿತರ ಕ್ರಾಂತಿಕಾರಕ ಸಂಶೋಧನೆಗಳನ್ನು ನೋಡಿದರೆ, ಅವರ ಸಂಶಯಗಳೆಲ್ಲ ನಿವಾರಣೆಯಾಗಿ ಹೋಗುತ್ತವೆ.

ಕರ್ನಾಟಕವು ಜ್ಞಾನ ಮತ್ತು ಸಂಪತ್ತು ಎರಡರಿಂದಲೂ ಮೇಳೈಸಿರುವ ರಾಜ್ಯವಾಗಿದೆ. ದೇಶದ ತಂತ್ರಜ್ಞಾನ ರಾಜಧಾನಿಯಾಗಿರುವ ಬೆಂಗಳೂರು ವೈಮಾಂತರಿಕ್ಷ, ಕೃತಕ ಬುದ್ಧಿಮತ್ತೆ, ಪ್ರತಿಭೆ ಮತ್ತು ಯುವಜನರ ಆಗರವಾಗಿದೆ. ಇಲ್ಲಿರುವ ಶಕ್ತಿ, ಮಹತ್ತ್ವಾಕಾಂಕ್ಷೆ ಮತ್ತು ಇಲ್ಲಿ ನಡೆಯುತ್ತಿರುವ ನಿರ್ಣಾಯಕ ಕೆಲಸಗಳು ದೇಶವನ್ನು ಎತ್ತರಕ್ಕೆ ಕೊಂಡೊಯ್ಯುತ್ತಿವೆ. ಇಲ್ಲಿಂದ ಸದ್ಯದಲ್ಲೇ ಕೃತಕ ಬುದ್ಧಿಮತ್ತೆ ಕ್ಷೇತ್ರದ ಪ್ರಪ್ರಥಮ ಮಾದರಿ ಕೂಡ ಹೊರಬರಲಿದೆ. ಇದಕ್ಕೆಲ್ಲ ಇಲ್ಲಿರುವ ಮಾನವ ಸಂಪನ್ಮೂಲ ಮತ್ತು ಸನ್ನದ್ಧವಾಗಿರುವ ಪ್ರತಿಭೆಯೇ ಕಾರಣ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಹೀಂದ್ರ ಸಮೂಹದ ಮುಖ್ಯಸ್ಥ ಆನಂದ್ ಮಹೀಂದ್ರ, ಜೆಎಸ್ ಡಬ್ಲ್ಯೂ ಗ್ರೂಪ್ ಮುಖ್ಯಸ್ಥ ಸಜ್ಜನ್ ಜಿಂದಾಲ್, ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ, ಕಿರ್ಲೋಸ್ಕಾರ್ ಸಿಸ್ಟಮ್ ಮುಖ್ಯಸ್ಥ ಗೀತಾಂಜಲಿ ಕಿರ್ಲೋಸ್ಕರ್, ಹಿರೋ ಪ್ಯೂಚರ್ ಎನರ್ಜಿ ಮುಖ್ಯಸ್ಥ ರಾಹುಲ್ ಮುಂಜಲ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
