ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಬೆಳಂಬೆಳಗ್ಗೆ ಧಾರಾಕಾರ ಮಳೆ ಸುರಿಯುತ್ತಿದ್ದು, ರಸ್ತೆಗಳಲ್ಲಿ ನೀರು ನಿಂತು ಜನ ಸಾಮಾನ್ಯರು ಪರದಾಡುವಂತೆ ಆಗಿದೆ. ಬೆಳಗ್ಗೆ 4 ಗಂಟೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ದಿನ ನಿತ್ಯದ ಕೆಲಸ ಕಾರ್ಯಗಳಿಗೆ ಭಾರೀ ತೊಂದರೆ ಆಗಿದೆ. ನಿರಂತರ ಮಳೆಯಿಂದಾಗಿ ಬೆಂಗಳೂರು ಜನ ತತ್ತರಿಸಿ ಹೋಗಿದ್ದು, ಮನೆಯಿಂದ ಹೊರಬರದ ಸ್ಥಿತಿ ನಿರ್ಮಾಣವಾಗಿದೆ. ಬಿಡದೆ ಸುರಿಯುತ್ತಿರುವ ಮಳೆಗೆ ಕೆಲಸ ಕಾರ್ಯಗಳಿಗೆ ಬ್ರೇಕ್ ಬೀಳ್ತಿದ್ದು, ಜನ ಹೈರಾಣಾಗಿದ್ದಾರೆ.
ಇನ್ನು ನಿನ್ನೆ ಸಂಜೆಯಿಂದಲೂ ನಗರದಲ್ಲಿ ಧಾರಾಕಾರ ಮಳೆಯಾಗಿದ್ದು, ಟ್ರಾಫಿಕ್ ಜಾಮ್ನಿಂದ ಕಾರ್ಪೊರೇಷನ್ ಸರ್ಕಲ್, ಕೆ.ಆರ್.ಮಾರ್ಕೆಟ್ ಸುತ್ತಮುತ್ತ ವಾಹನ ಸವಾರರು ಪರದಾಡಿದ್ದಾರೆ. ತಗ್ಗು ಪ್ರದೇಶಗಳೆಲ್ಲಾ ನದಿಯಂತಾಗಿದ್ದು, ಮೆಜೆಸ್ಟಿಕ್, ಮೈಸೂರು ರಸ್ತೆ. ಆರ್.ಆರ್.ನಗರ, ಯಶವಂತಪುರ, ಕೆ.ಆರ್.ಪುರ, ಕನಕಪುರ ರಸ್ತೆ, ಸೇರಿ ಎಲ್ಲೆಡೆ ಭಾರೀ ಮಳೆಯಾಗುತ್ತಿದೆ. ಇನ್ನು ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ಮಾತ್ರವಲ್ಲದೇ ರಾಜ್ಯದೆಲ್ಲೆಡೆ ಹೆಚ್ಚಿನ ಮಳೆಯಾಗುತ್ತಿದೆ. ವಿಶೇಷವಾಗಿ ದಕ್ಷಿಣ ಒಳನಾಡು-ಮಲೆನಾಡು-ಕರಾವಳಿ ಭಾಗಗಳಲ್ಲಿ ಉತ್ತಮ ಮಳೆ ಬಿಳುತ್ತಿದ್ದು, ಉಡುಪಿ-ಶಿವಮೊಗ್ಗ-ಚಿಕ್ಕಮಗಳೂರು-ರಾಮನಗರ ಜಿಲ್ಲೆಗಳಲ್ಲಿ 100 ಮಿಲಿಮೀಟರ್‌ಗೂ ಹೆಚ್ಚು ಮಳೆಯಾಗಿದೆ. ಮುಳ್ಳಯ್ಯನಗಿರಿ ಭಾಗದಲ್ಲಿ ಭಾರೀ ಮಳೆ ಸುರಿದಿದೆ.
ಮುಂದಿನ ಎರಡು ದಿನಗಳ ಕಾಲ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗ, ಮಂಡ್ಯ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ : ಚೊಚ್ಚಲ ಟಿ20 ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡ ನ್ಯೂಜಿಲೆಂಡ್ ವನಿತೆಯರು..!