ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡೆಯ ವಿರುದ್ಧ ಕಾಂಗ್ರೆಸ್ ಸಿಡಿದೆದ್ದಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಂಪುಟ ಸಭೆ ನಡೆಯಲಿದ್ದು, ರಾಜ್ಯಪಾಲರಿಗೆ ಸವಾಲೆಸೆಯಲು ಸಿಎಂ ಸಿದ್ದು ಚಿಂತನೆ ನಡೆಸಿದ್ದಾರೆ.
ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಪ್ರಾಸಿಕ್ಯೂಷನ್ ಪ್ರಕರಣಗಳ ಇತ್ಯರ್ಥಕ್ಕೆ ಸಂಪುಟ ಸಲಹೆ ನೀಡುವ ಸಾಧ್ಯತೆಯಿದೆ. ಸಭೆಯಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ತಾರತಮ್ಯ ನಡೆ ಬಗ್ಗೆ ಚರ್ಚೆ ನಡೆಯಲಿದ್ದು, ಬಾಕಿ ಉಳಿದಿರುವ ಪ್ರಕರಣಗಳ ಮಾಹಿತಿ ತರಿಸಿ ಚರ್ಚಿಸಲು ಕಾಂಗ್ರೆಸ್ ತೀರ್ಮಾನಿಸಿದೆ. ರಾಜ್ಯಪಾಲರ ಅನುಮತಿ ನಿರೀಕ್ಷೆಯಲ್ಲಿರುವ ಎಲ್ಲಾ ಕೇಸ್ಗಳ ಮಾಹಿತಿ ಸಂಗ್ರಹ ಮಾಡಲಿದೆ.
ಯಡಿಯೂರಪ್ಪ, ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಜನಾರ್ದನ್ ರೆಡ್ಡಿ, ಶಶಿಕಲಾ ಜೊಲ್ಲೆ ವಿರುದ್ಧದ ಪ್ರಾಸಿಕ್ಯೂಷನ್ ಅರ್ಜಿ ಬಾಕಿ ಇದೆ. ಈ ಪ್ರಕರಣಗಳಲ್ಲೂ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಕಾಂಗ್ರೆಸ್ ಮನವಿ ಮಾಡಲಿದೆ. ಆ ಮೂಲಕ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದಕ್ಕೆ ಸರ್ಕಾರ ರಾಜ್ಯಪಾಲರಿಗೆ ಕೌಂಟರ್ ಕೊಡಲಿದೆ.
ಇನ್ನು ಸಿಎಂ ಸಿದ್ದರಾಮಯ್ಯ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದಾರೆ. ಶಾಸಕಾಂಗ ಸಭೆಯಲ್ಲಿ ಮುಡಾ ವಿಚಾರದಲ್ಲಿ ಸಿಎಂ ಎಲ್ಲಾ ಮಾಹಿತಿ ನೀಡಲಿದ್ದು, ತಮಗೆ ಎಲ್ಲಾ ಶಾಸಕರ ಬೆಂಬಲವಿದೆ ಅನ್ನೋ ಸಂದೇಶ ರವಾನೆ ಮಾಡಲಿದ್ದಾರೆ. ಈ ಸಂದೇಶ ಹೊತ್ತು ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ.
ಇದನ್ನೂ ಓದಿ : ಕಾರಿಗೆ ಬೈಕ್ ಟಚ್ ಆಗಿದ್ದಕ್ಕೆ ಕಿರಿಕ್ – ಬೆಂಗಳೂರಿನಲ್ಲಿ ರೋಡ್ ರೇಜ್ಗೆ ಯುವಕ ಬಲಿ..!