ಬೆಂಗಳೂರು : ಭೋವಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮದ ಕುರಿತು ಸಿಐಡಿ ತನಿಖೆ ಎದುರಿಸಿದ್ದ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ DySP ಕನಕಲಕ್ಷ್ಮಿ ಅವರು ಸಲ್ಲಿಸಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನಗರದ ವಿಶೇಷ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ.
ಪೊಲೀಸರು ತಮ್ಮನ್ನು ಬಂಧಿಸುವ ಆತಂಕದಿಂದ ಸಿಐಡಿ DySP ಕನಕಲಕ್ಷ್ಮಿ ನ್ಯಾಯಾಲಯದ ಮೆಟ್ಟಿಲೇರಿದ್ದು, ತನ್ನ ಮುಖ್ಯ ಜಾಮೀನು ಅರ್ಜಿ ಇತ್ಯರ್ಥವಾಗುವವರೆಗೆ ಮಧ್ಯಂತರ ಜಾಮೀನು ನೀಡುವಂತೆ ಕೋರಿದ್ದರು. ಜಾಮೀನು ಅರ್ಜಿಯಲ್ಲಿ ತಮ್ಮ ವಿರುದ್ಧ ಮಾಡಿರುವ ಆರೋಪ ಸುಳ್ಳು. ತಾನು ನಿರಪರಾಧಿಯಾಗಿದ್ದು, ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಲಾಗಿದೆ ಎಂದಿದ್ದರು.
ನಿನ್ನೆ ಅರ್ಜಿ ವಿಚಾರಣೆ ನಡೆಸಿದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ, ಕನಕಲಕ್ಷ್ಮಿ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ತನಿಖೆ ಆರಂಭದ ಹಂತದಲ್ಲಿದೆ. ಅಪರಾಧಗಳ ಸ್ವರೂಪ ಮತ್ತು ಗಂಭೀರತೆ, ಪ್ರಕರಣದ ಸಂಗತಿಗಳು ಮತ್ತು ಸಂದರ್ಭಗಳನ್ನು ಪರಿಗಣನೆಗೆ ತೆಗೆದುಕೊಂಡ ನಂತರ, ಮಧ್ಯಂತರ ಜಾಮೀನಿನ ಮನವಿ ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಲಯ ಹೇಳಿದ್ದು, ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್ 5ಕ್ಕೆ ಮುಂದೂಡಿದೆ.
ಪ್ರಕರಣದ ಹಿನ್ನೆಲೆ : ಭೋವಿ ಅಭಿವೃದ್ಧಿ ನಿಗಮದ ಫಲಾನುಭವಿಗಳಿಗೆ ಮಟಿರಿಯಲ್ಸ್ ಪೂರೈಸುತ್ತಿದ್ದ ಎಸ್. ಜೀವಾ ಆತ್ಮಹತ್ಯೆಗೆ ಶರಣಾದ ಘಟನೆ ನವೆಂಬರ್ 22ರಂದು ನಡೆದಿತ್ತು. ಬನಶಂಕರಿ ಠಾಣೆ ವ್ಯಾಪ್ತಿಯ ರಾಘವೇಂದ್ರ ಲೇಔಟ್ನಲ್ಲಿರುವ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಜೀವಾ ಆತ್ಮಹತ್ಯೆಗೆ ಶರಣಾಗಿದ್ದರು. ಪ್ರಕರಣದ ವಿಚಾರಣೆಗೆ ಹಾಜರಾಗಿದ್ದ ಜೀವಾಗೆ ಸಿಐಡಿಯ ಡಿವೈಎಸ್‌ಪಿ ಕನಕಲಕ್ಷ್ಮಿ ಮಾನಸಿಕ ಕಿರುಕುಳ ನೀಡಿದ್ದಾರೆ, ಹಾಗೂ 25 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಮೃತಳ ಸಹೋದರಿ ಸಂಗೀತಾ ಆರೋಪಿಸಿದ್ದರು. ಜೀವಾ ಬರೆದಿಟ್ಟಿದ್ದ ಡೆತ್ ನೋಟ್ ಹಾಗೂ ಮೃತಳ ಸಹೋದರಿ ನೀಡಿದ್ದ ದೂರನ್ನು ಆಧರಿಸಿ ಎಫ್ಐಆರ್ ದಾಖಲಿಸಿಕೊಂಡಿದ್ದ ಬನಶಂಕರಿ ಠಾಣೆ ಪೊಲೀಸರು, ಪ್ರಾಥಮಿಕ ತನಿಖೆ ಕೈಗೆತ್ತಿಕೊಂಡಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿದ್ದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು, ಎಸಿಪಿ ಹಂತದ ಅಧಿಕಾರಿಯ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ್ದರು.
ಇದನ್ನೂ ಓದಿ : ಕೊಲೆ ಯತ್ನ, ಸುಪಾರಿ ಆರೋಪ : ಮಾಜಿ ಮಂತ್ರಿ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್..!