ದಾವಣಗೆರೆ : ನಿನ್ನೆ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ, ಸಿಎಂ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲೇ ಡಿಸಿಎಂ ಡಿ.ಕೆ. ಶಿವಕುಮಾರ್ಗೆ ಮುಖ್ಯಮಂತ್ರಿಯಾಗುವ ಅವಕಾಶ ಕೊಡುವಂತೆ ಮನವಿ ಮಾಡಿದ್ದರು. ಸದ್ಯ ಈ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೈ ನಾಯಕರು, ಸಿಎಂ ಮತ್ತು ಡಿಸಿಎಂ ಯಾರಾಗಬೇಕು? ಯಾರಿರಬೇಕು ಎಂಬುದನ್ನು ನಿರ್ಧಾರ ಮಾಡಲು ಹೈಕಮಾಂಡ್ ಇದೆ ಎಂದು ಹೇಳಿದೆ.
ಇನ್ನು ಈ ಬಗ್ಗೆ ದಾವಣಗೆರೆಯಲ್ಲಿ ಪ್ರತಿಕ್ರಿಯಿಸಿದ ಕಾಂಗ್ರೆಸ್ನ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ, “ಚಂದ್ರಶೇಖರನಾಥ ಸ್ವಾಮೀಜಿ ಹೇಳಿದರು ಎಂದ ಮಾತ್ರಕ್ಕೆ ಸಿಎಂ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ರನ್ನು ಕೂರಿಸಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಅಥವಾ ಉಪಮುಖ್ಯಮಂತ್ರಿ ಸ್ಥಾನಕ್ಕೆ ಯಾರಿರಬೇಕು? ಯಾರನ್ನು ಕೂರಿಸಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಸಿಎಂ ಆಗಿ ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ನಡೆಸಿದ್ದಾರೆ” ಎಂದು ಹೇಳಿದ್ದಾರೆ.
ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿದ್ದೇನು? ಡಿಕೆಶಿ ಅವರನ್ನು ಮುಖ್ಯಮಂತ್ರಿ ಮಾಡುವ ಅವಕಾಶ ಸಿದ್ದರಾಮಯ್ಯ ಅವರಿಂದ ಸಾಧ್ಯವಿದೆ. ಈಗಾಗಲೇ ಸಿಎಂ ಆಗಿ ಸಿದ್ದರಾಮಯ್ಯನವರು ಆಡಳಿತ ನಡೆಸಿದ್ದಾರೆ. ನಮ್ಮ ಸಮುದಾಯದ ಡಿ.ಕೆ ಶಿವಕುಮಾರ್ ಅವರಿಗೆ ಮುಂದೆ ಅವಕಾಶ ಮಾಡಿಕೊಡಲಿ ಎಂದು ಸ್ವಾಮೀಜಿ ಹೇಳಿದ್ದರು.
ಇದನ್ನೂ ಓದಿ : ಹಾವೇರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ – ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ, 13 ಮಂದಿ ಸಾವು..!