ಬೆಂಗಳೂರು : ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸಲಹೆ ಸೂಚನೆಗಳನ್ನ ನೀಡಿದ್ದಾರೆ. ಈ ಸಂದರ್ಭದಲ್ಲಿ ಮೊಬೈಲ್ ಲ್ಯಾಬ್, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ, ಮೊಬೈಲ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ವಾಹನದ ಉನ್ನತೀಕರಣದ ಕಾರ್ಯಕ್ಷಮತೆಯನ್ನು ಪರಿಶೀಲಿಸಿದ್ದಾರೆ.
ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಕಾನೂನು ಸುವ್ಯವಸ್ಥೆ ಕಟ್ಟುನಿಟ್ಟಾಗಿ ಕಾಪಾಡಿ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದರೆ ಸಹಿಸಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನು ನೀಡಿದ್ದಾರೆ. ಹಾಗೂ ಲೋಕಸಭೆ ಎಲೆಕ್ಷನ್ ಬರ್ತಿದೆ.. ಕ್ರಿಮಿನಲ್ಗಳ ಮೇಲೆ ಕಣ್ಣಿರಲಿ. ಕೋಮು ಸಂಘರ್ಷ ಆಗದಂತೆ ನೋಡಿಕೊಳ್ಳಬೇಕು. ಹೊಯ್ಸಳ, ನೈಟ್ ಬೀಟ್ ಪೊಲೀಸರು ಇನ್ನಷ್ಟು ಅಲರ್ಟ್ ಆಗಿರಬೇಕು. ಸಮರ್ಪಕವಾಗಿ ಕಾರ್ಯನಿರ್ವಹಣೆ ಮಾಡಬೇಕು ಎಂದು ಕಿವಿ ಮಾತು ಹೇಳಿದ್ದಾರೆ
ಕಾನೂನು ಸುವ್ಯವಸ್ಥೆ ಸಮಾಧಾನಕರವಾಗಿದೆ. ಕೋಮುಗಲಭೆಗಳು ನಿಯಂತ್ರಣಕ್ಕೆ ಬಂದಿವೆ. ಸೈಬರ್ ಅಪರಾಧ ತಡೆಯಲು ಹೆಚ್ಚಿನ ಕ್ರಮ ತೆಗೆದುಕೊಳ್ಳಿ. ಎಲ್ಲಾ ಪ್ರಕರಣ FIR ಮಾಡಿ, ಠಾಣೆಗಳು ಜನಸ್ನೇಹಿ ಆಗಿರಲಿ ಎಂದು ಸೂಚಿಸಿದ್ದಾರೆ.
ಪೊಲೀಸರಿಗೆ ನಮ್ಮ ಸರ್ಕಾರ ಸಂಪೂರ್ಣ ಫ್ರೀ ಹ್ಯಾಂಡ್ ಕೊಟ್ಟಿದೆ. ಪೊಲೀಸರ ಕೆಲಸದಲ್ಲಿ ಮೂಗು ತೂರಿಸಬಾರದು ಎನ್ನುವುದು ನನ್ನ ಬದ್ಧತೆ. ಆದರೆ ನಾವು ಫ್ರೀ ಹ್ಯಾಂಡ್ ಕೊಟ್ಟಿದ್ದು ದುರುಪಯೋಗ ಆಗಬಾರದು. ಅದು ಜನರಿಗೆ ಅನುಕೂಲ ಆಗುವಂತಿರಬೇಕು ಎಂದು ಹೇಳಿದ್ದಾರೆ.
ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಯಬೇಕು : – ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಡ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ಆರೋಪ ಪಟ್ಟಿ ಸಲ್ಲಿಕೆಯಾಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು. ಹಾಗೇ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಿ. ಶಿಕ್ಷೆ ಪ್ರಮಾಣ ಹೆಚ್ಚಾಗಬೇಕು. ಇಲ್ಲದಿದ್ದರೆ ಡಿಸಿಪಿ ಗಳನ್ನೇ ಈ ವೈಫಲ್ಯಕ್ಕೆ ಹೊಣೆ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.
ಇದನ್ನೂ ಓದಿ : ಬೆಂಗಳೂರು : ಎರಡು ಬೈಕ್ ಗಳ ಮಧ್ಯೆ ಭೀಕರ ಅಪಘಾತ – ತಂದೆ, ಮಗು ಸ್ಥಳದಲ್ಲೇ ಸಾ*ವು, ತಾಯಿ ಗಂಭೀರ..!