ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಇದರಿಂದ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ. ಒಂದೆಡೆ ವಿಪಕ್ಷಗಳು ಸಿಎಂ ರಾಜೀನಾಮೆಗೆ ಆಗ್ರಹಿಸುತ್ತಿದ್ದರೆ, ಮತ್ತೊಂದೆಡೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿ ರಾಜ್ಯಪಾಲರ ಆದೇಶದ ವಿರುದ್ಧ ಕಾನೂನು ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.
ಇನ್ನು, ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಗವರ್ನರ್ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಇಂದು ರಾಜ್ಯಾದ್ಯಂತ ಬೃಹತ್ ಹೋರಾಟಕ್ಕೆ ಸಜ್ಜಾಗಿದೆ. ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಕಾಂಗ್ರೆಸ್ ಬೀದಿಗಿಳಿಯಲಿದ್ದು, ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಹೋರಾಟ ನಡೆಯಲಿದೆ. ಗವರ್ನರ್ ನಡೆ ವಿರುದ್ಧ ಹಾಗೂ ಸಿಎಂ ಬೆಂಬಲಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದು, ಪ್ರತಿಭಟನೆಗೂ ಮುನ್ನ ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆ ಸಹ ಮಾಡಲಿದ್ದಾರೆ.
ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿಯೂ ಪ್ರತಿಭಟನೆ ನಡೆಯಲಿದೆ. ಬೆಂಗಳೂರು ಭಾಗದ ಸಚಿವರು, ಶಾಸಕರು ಪ್ರತಿಭಟನೆಗೆ ಸಾಥ್ ನೀಡಲಿದ್ದಾರೆ. ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳಿಗೆ ಕಾಂಗ್ರೆಸ್ ಮನವಿ ಸಲ್ಲಿಸಲಿದೆ. ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗಳಿಗೆ ಪತ್ರ ಮೂಲಕ ದೂರನ್ನು ಸಲ್ಲಿಸಲಿದ್ದಾರೆ. ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳಿಂದಲೂ ಪ್ರೊಟೆಸ್ಟ್ ನಡೆಯಲಿದ್ದು, ಅಹಿಂದ ಸಂಘಟನೆಗಳೂ ಸೇರಿದಂತೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆಗಿಳಿಯಲಿದೆ.
ಪ್ರತಿಭಟನೆ ತೀವ್ರತೆ ಬಗ್ಗೆ ಈಗಾಗಲೇ ಪೊಲೀಸರಿಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದು, ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ಪೊಲೀಸರು ಎಚ್ಚರಿಕೆ ವಹಿಸಲಿದ್ದು, ಪ್ರತಿಭಟನೆಯಲ್ಲಿ ಗೊಂದಲ ಶುರುವಾದ್ರೆ ಕೂಡ್ಲೆ ವಶಕ್ಕೆ ಪಡೆಯೋ ಸಾಧ್ಯತೆಯಿದೆ. ಶಾಂತಿಯುತ ಪ್ರತಿಭಟನೆಗೆ ಮಾತ್ರ ಪೊಲೀಸರು ಅವಕಾಶ ನೀಡಲಿದ್ದಾರೆ. ಇನ್ನು ಕೆಲ ಕಿಡಿಗೇಡಿಗಳು ಪ್ರತಿಭಟನೆ ವೇಳೆ ಕಲ್ಲೆಸೆಯೋ ಪ್ರಯತ್ನ ಮಾಡ್ತಾರೆ. ಶಾಂತಿಯುತವಾಗಿ, ಹುಷಾರಾಗಿ ಪ್ರತಿಭಟನೆ ಮಾಡಿ ಎಂದು ಕಾರ್ಯಕರ್ತರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ : ಪ್ರಾಸಿಕ್ಯೂಷನ್ ವಿರುದ್ಧ ಫೈಟ್ – ಇಂದು ಹೈಕೋರ್ಟ್‌ಗೆ ಸಿಎಂ ಸಿದ್ದು ಪರ ವಕೀಲರಿಂದ ರಿಟ್ ಅರ್ಜಿ..! –