ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್ ಚೈನ್ ಲಿಂಕ್ ಮುರಿದು ಬಿದ್ದಿದೆ. ಡ್ಯಾಂನ ಹೊರ ಹರಿವು ಏರಿಕೆಯಾಗಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿರುವುದರಿಂದ ನದಿ ಪಾತ್ರದ ರೈತರನ್ನು ಚಿಂತೆಗೀಡು ಮಾಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟ್ವೀಟ್ ಮಾಡುವ ಮೂಲಕ ಸಿಎಂ, ಡಿಸಿಎಂ ವಿರುದ್ಧ ಕಿಡಿಕಾರಿದ್ದಾರೆ.
ತುಂಗಭದ್ರಾ ಜಲಾಶಯದ ಚೈನ್ ಲಿಂಕ್ ಕಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡುವ ಮೂಲಕ ಗುಡುಗಿದ ಅವರು, ಸರ್ಕಾರದ ನಿರ್ಲಕ್ಷ್ಯದಿಂದ ಬಿತ್ತನೆಯಾಗಿರುವ ಬೆಳೆ ಕೈತಪ್ಪಬಹುದು. ಡಿಸಿಎಂಗೆ ಕಾಂಗ್ರೆಸ್ ಹೈಕಮಾಂಡ್ ಏಜೆಂಟ್ ಕೆಲಸವೇ ಹೆಚ್ಚಾಗಿದೆ. ರಾಜ್ಯದ ಪ್ರಜೆಗಳ ಹಿತಕ್ಕಿಂತ, ಪಕ್ಷದ ಹಿತವೇ ಆದ್ಯತೆಯಾಗಿದೆ. ಡಿಸಿಎಂ ಪಕ್ಕದ ರಾಜ್ಯಗಳ ಎಲೆಕ್ಷನ್ಗೆ ಹಣ ಹೊಂದಿಸುವಲ್ಲಿ ಬ್ಯುಸಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ಡ್ಯಾಂನ ಸುರಕ್ಷತೆ ಬಗ್ಗೆ ಗಮನ ಹರಿಸಿದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಉಪಮುಖ್ಯಮಂತ್ರಿಗೆ ಇಲಾಖೆಯ ಕರ್ತವ್ಯ ನಿರ್ವಹಿಸಲು ಸಮಯ ಎಲ್ಲಿದೆ ? ಸಿಎಂ ಕುರ್ಚಿ ಮೇಲೆ ಟವಲ್ ಹಾಕೋದರಲ್ಲೇ ಡಿಸಿಎಂ ಬ್ಯುಸಿಯಾಗಿದ್ದಾರೆ ಎಂದು ಹರಿಹಾಯ್ದಿದ್ದಾರೆ.
ನಿಮ್ಮ ಅಧಿಕಾರದ ತೆವಲಿಗೆ ರೈತರ ಬದುಕಿನ ಜೊತೆ ಇನ್ನೆಷ್ಟು ದಿನ ಚೆಲ್ಲಾಟ. ಉತ್ತಮ ಮಳೆಯಾಗಿದ್ದರೂ ರೈತರು ಕಣ್ಣೀರಿಡುವ ಪರಿಸ್ಥಿತಿ ಬಂದಿದೆ. ನಿಮ್ಮ ದುರಾಡಳಿತದಿಂದ ಕನ್ನಡಿಗರಿಗೆ ಆದಷ್ಟು ಬೇಗ ಮುಕ್ತಿ ಬೇಕಿದೆ. ಅನ್ನದಾತರ ಶಾಪ ತಟ್ಟುವ ಮುನ್ನ ರಾಜೀನಾಮೆ ಕೊಟ್ಟು ತೊಲಗಿ ಎಂದು ಟ್ವೀಟ್ ಮಾಡಿ ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ : ತುಂಗಭದ್ರಾ ಡ್ಯಾಂ ಅವಘಡಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ – ಬಸವರಾಜ ಬೊಮ್ಮಾಯಿ..!