ಬೆಂಗಳೂರು : ದೇಶಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ, ಸಡಗರ ಮನೆ ಮಾಡಿದೆ. ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣ ಬಳಿಕ ಸಿಎಂ ಸಿದ್ದರಾಮಯ್ಯ ಜನತೆಯನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯನವರು ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ ಎಂದು ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಹೇಳಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಗೆ ನಾವು ಬದ್ಧ. ಐದು ಗ್ಯಾರಂಟಿ ಜಾರಿಗೊಳಿಸಿದ್ದೇವೆ, ಮುಂದುವರೆಸುತ್ತೇವೆ. ಆರ್ಥಿಕ ಅಸಮಾನತೆಯಿಂದ ಜನರು ಬಸವಳಿದಿದ್ದರು. ಇಂಥಾ ಜನರಿಗೆ ಗ್ಯಾರಂಟಿ ಯೋಜನೆಗಳು ನೆಮ್ಮದಿ ತಂದಿವೆ.
ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ, ಯುವನಿಧಿ ನಿಲ್ಲಿಸಲ್ಲ ಎಂದು ಎರಡೆರಡು ಬಾರಿ ಗ್ಯಾರಂಟಿ ಯೋಜನೆ ಬಗ್ಗೆ ಸಿಎಂ ಸಿದ್ದು ಒತ್ತಿ ಹೇಳಿದ್ದಾರೆ. ಕಳೆದ ಎರಡು ದಿನಗಳಿಂದ ಎದ್ದಿದ್ದ ಗ್ಯಾರಂಟಿ ಗೊಂದಲಕ್ಕೆ ಈ ಮೂಲಕ ಸಿಎಂ ತೆರೆ ಎಳೆದಿದ್ದಾರೆ.
2023ರಲ್ಲಿ ಸ್ಪಷ್ಟ ಬಹುಮತದೊಂದಿಗೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕಳೆದ ಹದಿನೈದು ತಿಂಗಳಿನಲ್ಲಿ ಸ್ಪಷ್ಟ ಹೆಜ್ಜೆಗಳನ್ನ ಇಟ್ಟಿದ್ದೇವೆ. ಜನಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ರಾಜ್ಯದ ಜವಾಬ್ದಾರಿಯಾದರೆ, ಅವುಗಳಿಗೆ ಪೂರಕ ಸಂಪನ್ಮೂಲ ಒದಿಗಿಸುವುದು ಕೇಂದ್ರದ ಹೊಣೆಗಾರಿಕೆ. ಇತ್ತೀಚಿನ ಕೆಲ ವರ್ಷಗಳಲ್ಲಿ ಕೇಂದ್ರ ಸರ್ಕಾರ ಈ ಆಶಯದಿಂದ ದೂರ ಸರಿಯುತ್ತಿದೆ.
ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗುತ್ತಿದೆ. ಸಂವಿಧಾನದ ಆಶಯಗಳನ್ನು ನಿರ್ಲಕ್ಷಿಸಿ ರಾಜ್ಯಗಳಿಗೆ ದೊರೆಯಬೇಕಾದ ಹಣಕಾಸಿನ ಪಾಲನ್ನು ನೀಡಲು ಮೀನಾಮೇಷ ಎಣಿಸುತ್ತಿದೆ. ಕೇಂದ್ರದಿಂದ ಪರಿಹಾರ ಮೊತ್ತ ಪಡೆಯಲು ನ್ಯಾಯಾಲಯದ ಮೊರೆ ಹೋಗುವ ಅನಿವಾರ್ಯತೆ ಎದುರಾಗಿದೆ. ಇದು ಜನಹಿತಕ್ಕೆ ಒಳ್ಳೆಯದಲ್ಲ ಎಂದು ಬೇಸರ ಹೊರ ಹಾಕಿದ್ದಾರೆ.
ಇದನ್ನೂ ಓದಿ : ಪ್ರಜಾಪ್ರಭುತ್ವವು ಯಾರ ಕೈಗೊಂಬೆಯೂ ಅಲ್ಲ – ಸ್ವಾತಂತ್ರ್ಯೋತ್ಸವ ಭಾಷಣದಲ್ಲೂ ಕೇಂದ್ರಕ್ಕೆ ಸಿದ್ದು ಗುದ್ದು..!