ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಲೋಕಾಯುಕ್ತ ವಿಚಾರಣೆಗೆ ಸಚಿವ ಜಮೀರ್ ಅಹ್ಮದ್ ಅವರು ಹಾಜರಾಗಲಿದ್ದಾರೆ. ನ.16ರಂದು ಬೆಂಗಳೂರಿನ ಚಾಮರಾಜಪೇಟೆ ಜಮೀರ್ ಅಹ್ಮದ್ ಅವರ ಮನೆಗೆ ತೆರಳಿ ಲೋಕಾಯುಕ್ತ ಪೊಲೀಸರು ನೊಟೀಸ್ ನೀಡಿದ್ದು, ಸೂಕ್ತ ದಾಖಲೆಗಳೊಂದಿಗೆ ಖುದ್ದು ಹಾಜರಾಗುವಂತೆ ಸೂಚಿಸಿದ್ದರು. ಅದರಂತೆ ಇಂದು ಸಚಿವ ಜಮೀರ್ ಅಹ್ಮದ್ ಅವರು ‘ಲೋಕಾ’ ವಿಚಾರಣೆ ಎದುರಿಸಲಿದ್ದಾರೆ.
ಮೂರು ವರ್ಷಗಳ ಹಿಂದೆ ಜಮೀರ್ ವಿರುದ್ಧ ಎಸಿಬಿಯಲ್ಲಿ ಜಾರಿ ನಿರ್ದೇಶನಾಲಯದ ವರದಿ ಆಧರಿಸಿ ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ದಾಖಲಾಗಿತ್ತು. ಬಳಿಕ ಜಮೀರ್ ಅಹ್ಮದ್ ಮನೆ, ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆಸಿ ಪರಿಶೀಲನೆ ನಡೆಸಿತ್ತು. ಈ ವೇಳೆ ಮಹತ್ವದ ದಾಖಲೆಗಳನ್ನ ವಶಕ್ಕೆ ಪಡೆದಿತ್ತು. ನಂತರ ಎಸಿಬಿ ತನಿಖೆ ರದ್ದು ಮಾಡಿ ಸರ್ಕಾರ ಆದೇಶಿಸಿತ್ತು. ಎಸಿಬಿ ರದ್ದುಗೊಂಡ ನಂತರ ಆ ಪ್ರಕರಣದ ಮುಂದುವರೆದ ತನಿಖೆಯನ್ನು ಲೋಕಾಯುಕ್ತ ಪೊಲೀಸರು ಕೈಗೆತ್ತಿಕೊಂಡಿದ್ದರು. ಪ್ರಾಥಮಿಕ ಹಂತದ ತನಿಖೆ ಮುಗಿಸಿದ ಪೊಲೀಸರು, ಈಗ ಅಕ್ರಮ ಆಸ್ತಿ ಸಂಪಾದನೆ ಸಂಬಂಧ ವಿಚಾರಣೆಗೆ ಹಾಜರಾಗಲು ಸಚಿವರಿಗೆ ನೋಟಿಸ್ ಜಾರಿಗೊಳಿಸಿದೆ.
ಇದರೊಂದಿಗೆ ಅಕ್ರಮ ಆಸ್ತಿ ಸಂಪಾದನೆ ವಿಚಾರದಲ್ಲಿ ಜಮೀರ್ ಅವರಿಗೆ ಮತ್ತೆ ತನಿಖೆ ಸಂಕಷ್ಟ ಮುಂದುವರಿದಿದ್ದು, ತಮ್ಮ ಹಣಕಾಸು ವ್ಯವಹಾರದ ಕುರಿತು ಲೆಕ್ಕವನ್ನು ಲೋಕಾಯುಕ್ತಕ್ಕೆ ಸಚಿವರು ಸಲ್ಲಿಸಬೇಕಿದೆ. ತಮ್ಮ ಮೇಲಿನ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ ಆರೋಪದ ವಿಚಾರಣೆಗೆ ಪೂರಕ ದಾಖಲೆ ಸಮೇತ ಇಂದು ವಿಚಾರಣೆಗೆ ಹಾಜರಾಗಲು ಸಚಿವರಿಗೆ ಸೂಚಿಸಲಾಗಿದೆ.
ಇದನ್ನೂ ಓದಿ : ಫೆಂಗಲ್ ಚಂಡಮಾರುತದ ಎಫೆಕ್ಟ್ – ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಚುಮು ಚುಮು ಚಳಿ…!