ನವದೆಹಲಿ : ದೇಶದ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಕೊನೆಯುಸಿರೆಳೆದಿದ್ದು, ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ಡಿಸೆಂಬರ್ 28 ಅಂದರೆ ನಾಳೆ ದೆಹಲಿಯಲ್ಲಿ ನೆರವೇರಿಸಲಾಗುತ್ತದೆ. ಮನಮೋಹನ್ ಸಿಂಗ್ ಅವರ ಮಗಳು ಅಮೆರಿಕದಲ್ಲಿದ್ದಾರೆ. ಹೀಗಾಗಿ ಅವರು ಬರುವುದು ತಡವಾಗುವುದರಿಂದ ನಾಳೆ ಅಂತ್ಯಕ್ರಿಯೆ ನಡೆಸಲಾಗುತ್ತದೆ.
ಮಾಜಿ ಪ್ರಧಾನಿ, ಆರ್ಥಿಕ ಸುಧಾರಣೆಗಳ ಶಿಲ್ಪಿ ಡಾ. ಮನಮೋಹನ್ ಸಿಂಗ್ ಅವರ ಅಂತಿಮ ವಿಧಿ ವಿಧಾನಗಳನ್ನು ಡಿಸೆಂಬರ್ 28 ರಂದು ನಡೆಸಲಾಗುವುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ತಿಳಿಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಧಿಕೃತ ಘೋಷಣೆ ಇನ್ನೂ ಬಾಕಿ ಇದೆ. ಆದರೆ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯನ್ನು ನಾಳೆ ನಡೆಸಲಾಗುತ್ತದೆ. ಈ ಕುರಿತು ನಾವು ಅಧಿಕೃತವಾಗಿ ಅನೌನ್ಸ್ ಮಾಡುತ್ತೇವೆ ಎಂದು ಹೇಳಿದ್ದಾರೆ.
ಸಿಂಗ್ ಅವರ ಪಾರ್ಥಿವ ಶರೀರ ಏಮ್ಸ್ ನಿಂದ ಗುರುವಾರ ತಡರಾತ್ರಿ ಅವರ ನಿವಾಸಕ್ಕೆ ತಲುಪಿದೆ. ಇಂದು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಈಗಾಗಲೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್‌ನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಡಾ. ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಈಗಾಗಲೇ ಅಂತಿಮ ನಮನ ಸಲ್ಲಿಸಿದ್ದಾರೆ.
ಇದನ್ನೂ ಓದಿ : RBI ಗವರ್ನರ್ ಟು ಪ್ರಧಾನಿ ಆಗುವವರೆಗೆ.. ಡಾ.ಮನಮೋಹನ್ ಸಿಂಗ್ ನಡೆದು ಬಂದ ಹಾದಿಯೇ ರೋಚಕ..!