ಮುಂಬೈ : ಮುಂಬೈನ ಗೇಟ್‌ವೇ ಆಫ್ ಇಂಡಿಯಾ ಬಳಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹಡಗಿಗೆ ನೌಕಾಪಡೆಯ ಸ್ಪೀಡ್‌ಬೋಟ್ ಡಿಕ್ಕಿ ಹೊಡೆದು ಘೋರ ದುರಂತ ಸಂಭವಿಸಿದೆ. ದುರ್ಘಟನೆಯಲ್ಲಿ 13 ಮಂದಿ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮೃತರಲ್ಲಿ 10 ಪ್ರಯಾಣಿಕರು ಮತ್ತು ಮೂವರು ನೌಕಾಪಡೆ ಸಿಬ್ಬಂದಿ ಸೇರಿದ್ದಾರೆ ಎನ್ನಲಾಗಿದೆ.
ನಿನ್ನೆ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ತಕ್ಷಣವೇ ಪ್ರಯಾಣಿಕರನ್ನು ರಕ್ಷಿಸಲು ಕಾರ್ಯಾಚರಣೆ ಪ್ರಾರಂಭಿಸಲಾಗಿತ್ತು. ಗೇಟ್‌ವೇ ಆಫ್ ಇಂಡಿಯಾದಿಂದ ಎಲಿಫೆಂಟಾ ದ್ವೀಪಕ್ಕೆ ಪ್ರವಾಸಿಗರು ಹಡಗಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಘಟನೆ ನಡೆದ ಸ್ಥಳದಲ್ಲಿ 4 ಸೇನಾ ಹೆಲಿಕಾಪ್ಟರ್‌ಗಳು, 11 ನೌಕಾ ಕ್ರಾಫ್ಟ್‌ಗಳು ಹಾಗೂ 1 ಕೋಸ್ಟ್ಗಾರ್ಡ್ ಬೋಟ್‌ಗಳು ಬೀಡು ಬಿಟ್ಟು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, 3 ಮೆರೈನ್ ಪೊಲೀಸ್ ಕ್ರಾಫ್ಟ್‌ಗಳಿಂದ ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಸದ್ಯ ನಾಪತ್ತೆಯಾಗಿರುವ 7-8 ಪ್ರಯಾಣಿಕರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಈ ಘಟನೆಗೆ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಮಾಹಿತಿ ಪ್ರಕಾರ ಪ್ರಯಾಣಿಕರು, 5 ಸಿಬ್ಬಂದಿ ಸೇರಿದಂತೆ 101 ಜನರು ಹಡಗಿನಲ್ಲಿದ್ದರು. ನೌಕಾಪಡೆ, ಜೆಎನ್‌ಪಿಟಿ, ಕೋಸ್ಟ್ ಗಾರ್ಡ್, ಸ್ಥಳೀಯ ಪೊಲೀಸ್ ಮತ್ತು ಸ್ಥಳೀಯ ಮೀನುಗಾರಿಕಾ ದೋಣಿಗಳ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ನೌಕಾಪಡೆ ಮತ್ತು ಕೋಸ್ಟ್ ಗಾರ್ಡ್ ಬೃಹತ್ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದ್ದು, 11 ನೌಕಾಪಡೆಯ ದೋಣಿಗಳು ಮತ್ತು ಮರೈನ್ ಪೊಲೀಸರ ಮೂರು ಬೋಟ್‌ಗಳು ಮತ್ತು ಕೋಸ್ಟ್ ಗಾರ್ಡ್‌ನ ದೋಣಿಯನ್ನು ಪ್ರದೇಶದಲ್ಲಿ ನಿಯೋಜಿಸಲಾಗಿದೆ.
ಇದನ್ನೂ ಓದಿ : 87ನೇ ಕನ್ನಡ ಸಾಹಿತ್ಯ ಸಮ್ಮೇಳನ : ಡಿ.20, 21ರಂದು ಮಂಡ್ಯ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ..!