ನಟ ಶಿವರಾಜ್ಕುಮಾರ್ ತಮ್ಮ ಅನಾರೋಗ್ಯದ ಚಿಕಿತ್ಸೆಗಾಗಿ ಇಂದು ಅಮೆರಿಕಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಅಭಿಮಾನಿಗಳು ಶಿವಣ್ಣ ಬೇಗ ಹುಷರಾಗಿ ಬರಲಿ ಎಂದು ದೇವರಲ್ಲಿ ಬೇಡಿಕೊಂಡಿದ್ದಾರೆ. ಇದರ ನಡುವೆ ಇಂದು ಕಿಚ್ಚು ಸುದೀಪ್ ಅವರು ಕೂಡ ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.
ಮನೆಯಿಂದ ವಿಮಾನ ನಿಲ್ದಾಣಕ್ಕೆ ತೆರಳುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವರಾಜ್ಕುಮಾರ್ ಅವರು, ‘ಎಲ್ಲರಿಗೂ ಇರುವಂಥದ್ದೇ. ನಾವು ಕೂಡ ಸ್ವಲ್ಪ ಎಮೋಷನಲ್ ಆಗುತ್ತೇವೆ. ಅದು ಸಹಜ. ಇಲ್ಲಿ ಪರೀಕ್ಷೆ ಮಾಡಿಸಿದಾಗ ಎಲ್ಲ ಲಕ್ಷಣಗಳು ಚೆನ್ನಾಗಿವೆ. ಆದರೂ ಕೂಡ ಒಂದು ಆತಂಕ ಇದ್ದೇ ಇರುತ್ತದೆ. ಮನೆಯಿಂದ ಹೋಗುತ್ತಿದ್ದೇವಲ್ಲ.. ತಂಗಿ ಹಾಗೂ ಸಂಬಂಧಿಕರನ್ನೆಲ್ಲ ನೋಡುವಾಗ ಸ್ವಲ್ಪ ಎಮೋಷನಲ್ ಆಯಿತು. ಅಭಿಮಾನಿಗಳು ಕೂಡ ಇದ್ದಾರೆ. ಸ್ವಲ್ಪ ದುಃಖ ಆಗಿದೆ ಹೊರತೂ ಇನ್ನೇನೂ ಇಲ್ಲ’ ಎಂದು ಶಿವರಾಜ್ಕುಮಾರ್ ಹೇಳಿದ್ದಾರೆ.
‘ನಾನು ಆತ್ಮವಿಶ್ವಾಸದಿಂದ ಇದ್ದೇನೆ. ಡಿಸೆಂಬರ್ 24ರಂದು ಸರ್ಜರಿ ನಡೆಯುತ್ತದೆ. ಅದರ ಬಗ್ಗೆ ಏನೂ ಯೋಚನೆ ಇಲ್ಲ. ಕಡಿಮೆ ಅವಧಿ ಆದರೆ ಪರವಾಗಿಲ್ಲ. ಆದರೆ 35 ದಿನ ಮನೆಯಿಂದ, ಭಾರತದಿಂದ ಹೊರಗೆ ಇರುತ್ತೇನೆ ಎಂಬ ನೋವು ಇರುತ್ತದೆ. ಎಲ್ಲರ ಹಾರೈಕೆ ಇದೆ. ಅಭಿಮಾನಿಗಳು, ಮಾಧ್ಯಮದವರು ಕಾಳಜಿ ತೋರಿಸಿದ್ದಾರೆ. ಆರೋಗ್ಯ ಸಮಸ್ಯೆ ಇದೆ ಎಂಬುದು ಗೊತ್ತಿದ್ದರೂ ಕೂಡ ಯಾರೂ ಅದನ್ನು ವೈಭವಿಕರಿಸಿಲ್ಲ. ಅದು ನನಗೆ ಖುಷಿ ಕೊಟ್ಟಿದೆ. ಅಷ್ಟು ಪ್ರೀತಿ ಮತ್ತು ಗೌರವ ನನ್ನ ಮೇಲೆ ಇಟ್ಟಿದ್ದಾರೆ’ ಎಂದು ಶಿವರಾಜ್ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ : ಚಿಕ್ಕಬಳ್ಳಾಪುರದಲ್ಲಿ ರಸ್ತೆ ಮಧ್ಯೆ ಹೊತ್ತಿ ಉರಿದ KSRTC ಬಸ್..!