ಬೆಂಗಳೂರು : ವಕ್ಫ್ ವಿಚಾರ ಹಿನ್ನೆಲೆಯಲ್ಲಿ ಹಾವೇರಿಯ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಎಂದು ಸುಳ್ಳು ಮಾಹಿತಿಯನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಕಟಿಸಿದ್ದ ಆರೋಪದ ಮೇಲೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಸಂಸದ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಹಾವೇರಿ ಪೊಲೀಸರು ದಾಖಲಿಸಿರುವ ಪ್ರಕರಣದ ಎಫ್‌ಐಆರ್ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ. ಸಂಸದ ತೇಜಸ್ವಿ ಸೂರ್ಯ ಪರ ವಕೀಲ ಅರುಣ್ ಶ್ಯಾಮ್ ಅವರು ವಾದ ಮಂಡಿಸಿದ್ದಾರೆ.
ಏನಿದು ಪ್ರಕರಣ? ನವೆಂಬರ್ 7ರಂದು ವಕ್ಫ್ ವಿಚಾರ ಹಿನ್ನೆಲೆಯಲ್ಲಿ ಹಾವೇರಿಯ ರೈತ ರುದ್ರಪ್ಪ ಚನ್ನಪ್ಪ ಬಾಳಿಕಾಯಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ವರದಿಯಾಗಿತ್ತು. ಆ ವರದಿಯನ್ನು ಆಧರಿಸಿ ತೇಜಸ್ವಿ ಸೂರ್ಯ, ವಕ್ಫ್ ವಿವಾದದಿಂದಾಗಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಎಕ್ಸ್‌ನಲ್ಲಿ ಪ್ರಕಟಿಸಿದ್ದರು. ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿರುವುದು 2022ರ ಜ.6ರಂದು, ಅದು ಬೆಳೆಹಾನಿ ಮತ್ತು ಸಾಲದ ಬಾಧೆಯಿಂದ, ಅವರ ಆತ್ಮಹತ್ಯೆಗೂ ವಕ್ಫ್ ವಿವಾದಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.
ಆನಂತರ, ತೇಜಸ್ವಿ ಸೂರ್ಯ ಎಕ್ಸ್‌ನಲ್ಲಿ ಪ್ರಕಟಿಸಿದ್ದ ಮಾಹಿತಿ ತೆರವು ಮಾಡಿದ್ದರು. ಪೊಲೀಸರು ನ.7ರಂದು ದ್ವೇಷ ಬಿತ್ತುವ ಹೇಳಿಕೆ ನೀಡಿದ್ದಾರೆಂದು ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 353(2) ಅನ್ವಯ ಸ್ವಯಂಪ್ರೇರಿತ ದೂರು ದಾಖಲಿಸಿದ್ದರು. ಅದನ್ನು ಪ್ರಶ್ನಿಸಿ ಸಂಸದ ಹೈಕೋರ್ಟ್ ಮೊರೆ ಹೋಗಿದ್ದರು.
ಇದನ್ನೂ ಓದಿ : ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಇನ್ಸ್ಪೆಕ್ಟರ್ ಅಯ್ಯಣ್ಣ ರೆಡ್ಡಿ ಅರೆಸ್ಟ್..!