ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿರುವ ನಿವೇಶನಗಳ ಅಕ್ರಮ ಹಂಚಿಕೆಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು, ಕೂಡಲೇ ನ್ಯಾಯಾಲಯವು ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ದಾಖಲಿಸಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯವರಿಗೆ ಪತ್ರ ಬರೆದಿದ್ದಾರೆ.
ಈ ಸಂಬಂಧ ಶಾಸಕ ಯತ್ನಾಳ್ ಅವರು ಟ್ವೀಟ್ ಮಾಡಿದ್ದು, “ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣವು ಸುಮಾರು ₹ 4,000 ಕೋಟಿ ಒಳಗೊಂಡಿರುವ ಗಂಭೀರ ಹಗರಣವಾಗಿದ್ದು, ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಚಿವರು ಭಾಗಿಯಾಗಿದ್ದಾರೆ.
ಹಗರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಹಿಂಪಡೆಯಲು ಕರ್ನಾಟಕ ಕ್ಯಾಬಿನೆಟ್‌ನ ಸಚಿವರೊಬ್ಬರು ಮೈಸೂರಿಗೆ ಪ್ರಯಾಣಿಸಿದ್ದಾರೆ ಎಂದು ಇತ್ತೀಚಿನ ಮಾಧ್ಯಮ ವರದಿಗಳು ಬಹಿರಂಗಪಡಿಸಿವೆ.
ಮುಡಾ ಹಗರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಲು ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಪ್ರಾರಂಭಿಸಲು ನಾನು ಕರ್ನಾಟಕದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರವನ್ನು ಸಲ್ಲಿಸಿದ್ದೇನೆ. ಹೆಚ್ಚುವರಿಯಾಗಿ, ಕರ್ನಾಟಕ ಹೈಕೋರ್ಟ್ ತನಿಖೆಯ ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಮೇಲ್ವಿಚಾರಣೆ ಮಾಡಬೇಕೆಂದು ನಾನು ಒತ್ತಾಯಿಸಿದೆ. ಎಂದು ಟ್ವೀಟ್ ಮೂಲಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ : ಕನ್ನಡ ಕಲಾ ಲೋಕದ ಅಪರೂಪದ ಪ್ರತಿಭೆ – ನಮ್ಮ ಮೆಟ್ರೋಗೆ ಧ್ವನಿಯಾಗಿದ್ದ ನಿರೂಪಕಿ ಅಪರ್ಣಾ ಇನ್ನು ನೆನಪು ಮಾತ್ರ..!